ಬೆಂಗಳೂರು: ನಮ್ಮ ಸರ್ಕಾರ ಬಂದ ಮೇಲೆ 18 ಲಕ್ಷ ಮನೆ ನಿರ್ಮಾಣ ಕಾರ್ಯ ನಡೆಸಿದೆ. ಒಟ್ಟು 5 ಲಕ್ಷ ಮನೆಗಳನ್ನು ನಾನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಲಗೇರಹಳ್ಳಿಯಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 80 ಸಾವಿರ ಮನೆ ಮಂಜೂರು ಮಾಡಲಾಗಿದೆ ಎಂದರು. ಈ ಹಿಂದಿನ ಕಾಂಗ್ರೆಸ್ ಸರ್ಕಾರ 2018 ರಲ್ಲಿ ಸರ್ಕಾರದ ಕೊನೆಯ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ಘೋಷಣೆ ಮಾಡಿತ್ತು.
ಮುಂದಿನ ದಿನಗಳಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಚಿತ್ರಣ ನಿಮ್ಮ ಮುಂದಿಡುತ್ತೇನೆ ಎಂದರು. ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ವಸತಿ ಕಲ್ಪಿಸಲು ಬಹಳ ದೊಡ್ಡ ಪ್ರಮಾಣದಲ್ಲಿ ನಾವು ಕ್ರಮ ತೆಗೆದುಕೊಂಡಿದ್ದೇವೆ. 18 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಐದು ಲಕ್ಷ ಮನೆ ಮಂಜೂರು ಮಾಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು ಈಗಾಗಲೇ 40 ಸಾವಿರ ಮನೆಗಳ ಹಂಚಿಕೆ ಮಾಡಿ ಚಾಲನೆ ನೀಡಲಾಗಿದೆ. ಇದು ಕ್ರಿಯಾಶೀಲ ವಸತಿ ಸಚಿವ ವಿ.ಸೋಮಣ್ಣ ಅವರಿಂದ ಸಾಧ್ಯವಾಗಿದೆ ಎಂದರು. ಆದಷ್ಟು ಶೀಘ್ರವೇ ಬೆಂಗಳೂರಿನ ಅಭಿವೃದ್ಧಿ ಕುರಿತಾದ ಹೊಸ ಪ್ರಸ್ತಾವನೆಯೊಂದನ್ನು ಜನರ ಮುಂದೆ ಇಡುತ್ತೇವೆ ಎಂದು ತಿಳಿಸಿದರು.