ವಾರ್ ಎಫೆಕ್ಟ್, ಬೆಂಗಳೂರಿನಲ್ಲಿ ಕಮರ್ಷಿಯಲ್ ಸಿಲಿಂಡರ್ ಕೊರತೆ; ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಬಹುತೇಕ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಗೆ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ಮೇಲೆ ಭಾರಿ ಹೊಡೆತ ಬಿದ್ದಿದ್ದು, ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನಗರದ ಹಲವು ಹೋಟೆಲ್ ಮತ್ತು ರೆಸ್ಟೋರೆಂಟ್​​ಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸಾವಿರಾರು ಸಣ್ಣ ಹೋಟೆಲ್‌ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನರು ಇವುಗಳ ಮೇಲೆ ಅವಲಂಬಿತರಿದ್ದಾರೆ. ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ಹೊರನಗರಗಳಿಂದ ಬಂದಿರುವ ಅನೇಕರು ದಿನನಿತ್ಯದ ಆಹಾರಕ್ಕಾಗಿ ಇಂತಹ ಹೋಟೆಲ್ ಮತ್ತು ಮೆಸ್ಸುಗಳನ್ನೇ ನಂಬಿಕೊಂಡಿದ್ದಾರೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ, ವಾಣಿಜ್ಯ ಎಲ್‌ಪಿಜಿ ಕೊರತೆಯಿಂದ ಬೆಂಗಳೂರಿನ ಹೋಟೆಲ್ ಉದ್ಯಮ ಮಾತ್ರವಲ್ಲದೆ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಸಾಮಾನ್ಯ ಜನರ ದಿನನಿತ್ಯದ ಬದುಕಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *