ಮೈಸೂರು : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಆಗಾಗ ಕೇಳಿಬರುತ್ತಿರುವ ಬೆನ್ನಲ್ಲೇ, ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ನೀವು ಅಂದುಕೊಂಡಷ್ಟು ಸುಲಭ ವ್ಯಕ್ತಿಯಲ್ಲ. ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಅಷ್ಟು ಸುಲಭವಲ್ಲ ಎಂದು ವಿರೋಧಿಗಳಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಬೆಲೆ ಏರಿಕೆ ವಿರುದ್ಧ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ವಿಶಿಷ್ಟವಾಗಿ ಪ್ರತಿಭಟಿಸಿದರು. ತಳ್ಳುಗಾಡಿಯಲ್ಲಿ ಉಪ್ಪಿನ ಮೂಟೆಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಉಪ್ಪು ಹಂಚುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಸರ್ಕಾರದ ಗಮನ ಸೆಳೆದರು. ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಡಿ.ಕೆ.ಶಿವಕುಮಾರ್ ಬರ್ತಡೇಗೆ ಗುಡ್ ನ್ಯೂಸ್ ಸಿಗುವ ಮುನ್ಸೂಚನೆ ಸಿಕ್ಕಿದೆ : ಶಾಸಕ ರಂಗನಾಥ್ ಹೇಳಿಕೆ
ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜಕೀಯ ಚಾಣಾಕ್ಷತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅವರು ಅತ್ಯಂತ ಬುದ್ಧಿವಂತ ರಾಜಕಾರಣಿ. ಯಾರಿಗೆ ಯಾವಾಗ ಯಾವ ‘ಮ್ಯಾಜಿಕ್’ ಮಾಡಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ ಎಂದು ವಾಟಾಳ್ ಬಣ್ಣಿಸಿದರು.
ಪರ್ಯಾಯ ನಾಯಕನಿಲ್ಲ: ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಆಗಲಿ ಅಥವಾ ಇತರ ಯಾವುದೇ ಪಕ್ಷಗಳಲ್ಲಾಗಲಿ ಸಿದ್ದರಾಮಯ್ಯ ಅವರಿಗೆ ಪರ್ಯಾಯವಾದ ಶಕ್ತಿಯುತ ನಾಯಕನಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಅವರ ನಾಯಕತ್ವಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯಬಾರದು ಎಂದು ಒತ್ತಾಯಿಸಿದರು. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಂಚು ರೂಪಿಸಿದರೆ, ರಾಜ್ಯಾದ್ಯಂತ ದೊಡ್ಡ ಮಟ್ಟದ ಕ್ರಾಂತಿಯಾಗಲಿದೆ. ಸಾವಿರಾರು ಜನರು ಜೈಲು ಸೇರಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದರು.