ಕೋಲಾರ : ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿದೆ. ವರ್ಗಾವಣೆ ದಂಧೆಯಲ್ಲಿ ಮತ್ತು ಕಮೀಷನ್ ದಂಧೆಯಲ್ಲಿ ಸರ್ಕಾರ ಸಂಪೂರ್ಣವಾಗಿ ತೊಡಗಿದೆ. ರೈತ ಪರ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಸಂಸದ ಸದಾನಂದ ಗೌಡ ಕಿಡಿ ಕಾರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಗರದಲ್ಲಿಂದು ಕುರುಡುಮಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೆಚ್ಚಿಸಲು ರಾಜ್ಯದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ‘ಇಂಡಿಯಾ’ ಮೈತ್ರಿಕೂಟದ ಸಂಬಂಧ ಗಟ್ಟಿಗೊಳಿಸಲು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ದೂರಿದರು.
ಇದನ್ನೂ ಓದಿ : ಪ್ರಧಾನಿಯಿಂದ ಇಂದು ‘ಯಶೋಭೂಮಿ’ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ : ಏನಿದರ ವಿಶೇಷತೆ?
ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯ ವಸ್ತುಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದುರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.
ಬಿಜೆಪಿ-ಜೆಡಿಎಸ್ ಮೈತ್ರಿ ಎಲ್ಲೂ ಚರ್ಚೆಯಾಗಿಲ್ಲ..
ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಎಲ್ಲಾ ಪ್ರಯತ್ನಗಳು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸೋಲಿಸುತ್ತೇವೆ. ಬಿಜೆಪಿ- ಜೆಡಿಎಸ್ ಮೈತ್ರಿ ಎಲ್ಲೂ ಅಧಿಕೃತವಾಗಿಲ್ಲ. ಪಕ್ಷದ ಯಾವುದೇ ವೇದಿಕೆಯಲ್ಲಿ ಇದರ ಬಗ್ಗೆ ಚರ್ಚೆಯಾಗಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಯಾವ ಚರ್ಚೆ ಆಗಿದೆ ಎನ್ನುವುದರ ಬಗ್ಗೆ ಮಾಹಿತಿಯಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದವಾಗಿರುತ್ತೇವೆ ಎಂದು ಸದಾನಂದ ಗೌಡ ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.