ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಭೇಟಿ ನೀಡಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ನಂತರ ಮಾತನಾಡಿ, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೂರು ಪಟ್ಟಿ ಬಿಡುಗಡೆ ಮಾಡಿದ್ದರೂ ನನಗೆ ಟಿಕೆಟ್ ನೀಡಿಲ್ಲ. ಇದರಿಂದ ಸಾಕಷ್ಟು ನೊಂದಿದ್ದೇನೆ, ಬೇಸತ್ತಿದ್ದೇನೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಮ್ಮ ನೋವು ತೋಡಿಕೊಂಡಿದ್ದಾರೆ.
ಬೇರೆ ಪಕ್ಷದ ನಾಯಕರ ಜತೆ ಈ ಬಗ್ಗೆ ಚರ್ಚಿಸಿಲ್ಲ, ಕ್ಷೇತ್ರದ ಮುಖಂಡರ ಜತೆ ಚರ್ಚಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಕ್ಷೇತ್ರದ ಮುಖಂಡರು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಮ್ಮಲ್ಲಿ ಹಿಂದೂ, ಮುಸ್ಲಿಂ , ಕ್ರಿಶ್ಚಿಯನ್ ಅಂತೇನಿಲ್ಲ, ಎಲ್ಲರೂ ಒಂದಾಗಿದ್ದೇವೆ, ಕ್ಷೇತ್ರದ ಜನತೆ ಜೊತೆ ಮಾತಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.