ಕೋಲಾರ : ಗುಜರಾತ್‌ನ ಮಾದರಿಯಲ್ಲಿ ಸಿಎಂ ಒಬ್ಬರನ್ನು ಹೊರತುಪಡಿಸಿ ಎಲ್ಲಾ ಸಚಿವರೂ ರಾಜೀನಾಮೆ ನೀಡಿದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಸಚಿವರೆಲ್ಲ ರಾಜೀನಾಮೆ ನೀಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ನಗರದ ಕೋಮುಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟ, ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ಎಲ್ಲಾ ಶಾಸಕರು ಸಚಿವರಾಗೋಕೆ ಆಗಲ್ಲ. ಕೆಲವರು ಈಗಾಗಲೇ ಮಂತ್ರಿಗಳಾಗಿದ್ದು, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕಲ್ವಾ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ರಾಜ್ಯದಲ್ಲಿಯೂ ಸಂಪುಟ ಪುನಾರಚನೆ ಆಗಲಿದೆ ಎಂಬ ಸುದ್ದಿಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಚಾರದಲ್ಲಿ ಪರವಾಗಿಲ್ಲ. ಆದರೆ, ಉಳಿದ ಎಲ್ಲ ಸಚಿವರ ರಾಜೀನಾಮೆಯನ್ನು ಕೊಡಿಸಬೇಕು. ಆ ಮೂಲಕ ಸಂಪುಟ ಪುನಾರಚನೆ ವೇಳೆ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದರು.