ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ, ಕಾವೇರಿ ಜಲ ವಿವಾದ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಸಭೆ ಮುಕ್ತಾಯವಾಗಿದ್ದು, ಕೆಆರ್‌ಎಸ್ ಡ್ಯಾಂನಲ್ಲಿ ಶೇಖರಣೆ ಕಡಿಮೆ ಇದ್ದರೂ ತಮಿಳುನಾಡಿಗೆ ನೀರು ಬಿಟ್ಟಿದ್ದು ಸರಿಯಲ್ಲ ಎಂದು ವಿಪಕ್ಷಗಳ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ‘ಕಾವೇರಿ ವಿವಾದ ಕುರಿತು ಸಂಕಷ್ಟ ಸೂತ್ರ ಪಾಲನೆ ಮಾಡಿದ್ದೆವೆ; ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಿಲ್ಲ’ ಎಂದು ವಿಪಕ್ಷ ನಾಯಕರಿಗೆ ಅವರು ಮನವರಿಕೆ ಮಾಡಿದರು.
‘ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ ಮಳೆ ಕೊರತೆ ಉಂಟಾಗಿದೆ. ರಾಜ್ಯಕ್ಕೆ ಇದು ಜಲಸಂಕಷ್ಟ ವರ್ಷ ಎಂದು’ ಸಚಿವರು ಹೇಳಿದರು.
ಇದನ್ನೂ ಓದಿ; ಕೆಆರ್‌ಎಸ್ ಡ್ಯಾಂ: ವಾರದಲ್ಲಿ 7 ಟಿಎಂಸಿ ನೀರು ಖಾಲಿ; ಮಂಡ್ಯ ರೈತರಲ್ಲಿ ಆತಂಕ!
‘ಕಾವೇರಿ ನೀರು ನಿರ್ವಹಣಾ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10ರಂದು 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸಭೆಯಲ್ಲಿ ಈ ಬಗ್ಗೆ ನಾವು ಬಲವಾಗಿ ವಿರೋಧಿಸಿದ್ದೇವೆ’ ಎಂದು ಸಚಿವರು ಸರ್ವ ಪಕ್ಷಗಳ ನಾಯಕರಿಗೆ ಮಾಹಿತಿ ನೀಡಿದರು.
’15 ಸಾವಿರ ಕ್ಯೂಸೆಕ್ಸ್ ಕೇಳಿದ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಸ್‌ಗೆ ಇಳಿಕೆ ಮಾಡಿ ಒಪ್ಪಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದೆ. ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ’ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ಹಂಚಿಕೊಂಡರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಎಲ್. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಮಾತನಾಡಿ ಸರ್ಕಾರಕ್ಕೆ ಸಲಹೆ ಸೂಚನೆ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.