ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವ ಡಿ.ಸುಧಾಕರ್ ವಿರುದ್ಧ ದಲಿತರ ಮೇಲಿನ ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹಿರಿಯೂರು ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಯಲಹಂಕದ ಸುಬ್ಬಮ್ಮ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ. ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾಗಿರುವ ಸುಧಾಕರ್, ಮೋಸದಿಂದ ದಲಿತರ ಆಸ್ತಿ ಕಬಳಿಕೆ ಮಾಡಿದ್ದು, ತನ್ನ ಮಗಳ ಮೇಲೂ ಹಲ್ಲೆ ಮಾಡಿದ್ದಾರೆಂದು ಸುಬ್ಬಮ್ಮ ಆರೋಪಿಸಿದ್ದಾರೆ. ಆದ್ದರಿಂದ, ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ಎಂಬುವವರ ವಿರುದ್ಧ ಎಫ್ಐಆರ್ ಹಾಕಲಾಗಿದೆ.
ಇದನ್ನೂ ಓದಿ; ದೇಶದ ಐಕ್ಯತೆ ಕಾಪಾಡುವಲ್ಲಿ ಸುನ್ನಿ ವಿದ್ಯಾರ್ಥಿಗಳ ಕೊಡುಗೆ ಇದೆ; ಸಿಎಂ
ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದು, ಕೋರ್ಟ್ನಲ್ಲಿ ಕೇಸ್ ನಡೆಯುತ್ತಿರುವಾಗಲೇ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ನಡೆಸಿದ್ದಾರೆ. ಮಹಿಳೆಯರನ್ನು ಕರೆದೊಯ್ದು ಜೆಸಿಬಿ ಮೂಲಕ ಮನೆ ಕೆಡವಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ನವರು 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿದ್ದಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎನ್ನಲಾಗಿದೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್‌ಗೆ ಸೇರಿದ ಆಸ್ತಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದಡಿ ಯಲಹಂಕ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವ ಡಿ.ಸುಧಾಕರ್ ಪುತ್ರ, ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪನಿಯ ನಿರ್ದೇಶಕ ಸುಹಾಸ್ ಸುಧಾಕರ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.