ಮಂಡ್ಯ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.30ರಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ.ಜಿಲ್ಲೆಯಲ್ಲಿ ಈ ಬಾರಿ ಕನಿಷ್ಠ 6 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಮುಖಂಡರು, ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಲು ಸಜ್ಜಾಗಿದ್ದಾರೆ.
ಡಿ.30ರಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಶಾ, ಅಲ್ಲಿಂದ ಮದ್ದೂರಿನ ಗೆಜ್ಜಲಗೆರೆಯಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೇರಿಗೆ ಚಾಲನೆ ನೀಡಲಿದ್ದಾರೆ. ಬಳಿಕ, ಬಹಿರಂಗ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಸಭೆ ಮುಗಿದ ಬಳಿಕ ಅಮಿತ್ ಶಾ ಅವರು ಬೆಂಗಳೂರು ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಫೆಬ್ರವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆ ವೇಳೆ, ಮಂಡ್ಯಕ್ಕೂ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಬೃಹತ್ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಕೂಡ ಇದೀಗ ಎಚ್ಚೆತ್ತುಕೊಂಡಿದ್ದು, ಡಿಸೆಂಬರ್ 30ರಂದು ಅಮಿತ್ ಶಾ ಕೂಡ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯೊಳಗೆ ಬಿಜೆಪಿ ಗೆಲ್ಲಿಸಬೇಕೆಂಬ ಗುರಿಯನ್ನಿಟ್ಟುಕೊಂಡು ಚುನಾವಣೆಗೆ ನಾಲ್ಕು ತಿಂಗಳು ಮುಂಚಿತವಾಗಿಯೇ ಪ್ಲಾನ್ ರೂಪಿಸಲು ಆಗಮಿಸುತ್ತಿದ್ದಾರೆ.