ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಅಮಿತ್ ಶಾ ಕರೆ ಮಾಡಿರುವ ವಿಚಾರ ಕುತೂಹಲಕ್ಕೆ ಕಾರಣವಾಗಿದೆ.
ನಿನ್ನೆ (ಆಗಸ್ಟ್ 25) ರಾತ್ರಿ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿರುವ ಅಮಿತ್ ಶಾ, ಸುಮಾರು 10 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿಯ ಹಿರಿಯ ನಾಯಕರಾಗಿದ್ದ ಜಗದೀಶ್ ಶೆಟ್ಟರ್, ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷ ಬಿಟ್ಟು ಹೋಗಿರುವ ನಾಯಕರನ್ನು ವಾಪಸ್ ಕರೆ ತರುವ ಪ್ರಯತ್ನಕ್ಕೆ ಬಿಜೆಪಿ ಕೈ ಹಾಕಿದೆಯಾ? ಎಂಬ ಪ್ರಶ್ನೆ ಎದ್ದಿದೆ.
ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ- ಹೆಬ್ಬಾಳ್ಕರ್ : ಅಮಿತ್ ಶಾ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿದ್ದಾರೆ ಎಂಬುವುದರ ಕುರಿತು ಪ್ರತಿಕ್ರಿಯೆ ನೀಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿರಾಕರಿಸಿದರು. ‘ನಾನು ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕೆಲಸದಲ್ಲಿದ್ದೇನೆ. ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾರು ಯಾರಿಗೆ ಕರೆ ಮಾಡಿದ್ರು, ಯಾಕೆ ಕರೆ ಮಾಡಿದ್ರು ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಕಾಂಗ್ರೆಸ್ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ ಕೊಟ್ಟಿದೆ : ಬಿಜೆಪಿ ಜಗದೀಶ್ ಶೆಟ್ಟರ್ ಗೆ ಯಾವ ರೀತಿ ಮೋಸ ಮಾಡಿದೆ ಎಂಬುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಅವರಿಗೆ ಸೂಕ್ತ ಸ್ಥಾನ ಮಾನ ಕೊಟ್ಟಿದೆ. ಶೆಟ್ಟರ್ ಎಲ್ಲವನ್ನು ಅಳೆದು ತೂಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು ಎಂದು ಮೈಸೂರಿನಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.