ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಭ್ರಷ್ಟಾಚಾರದ ಆಡಳಿತ ಮಾಡಿವೆ. ಅವರಿಗೆ ರಾಜ್ಯದ ಅಭಿವೃದ್ಧಿಗಿಂತ ವೈಯಕ್ತಿಕ ಅಭಿವೃದ್ಧಿಯೇ ಮುಖ್ಯವಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು.
ಮಂಡ್ಯದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕುಟುಂಬ ಪರಿವಾರದಿಂದ ತುಂಬಿರುವ ಪಕ್ಷಗಳಾಗಿದ್ದು, ಭ್ರಷ್ಟಾಚಾರವನ್ನು ಮಾಡುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿರುವ ಕುಟುಂಬಕ್ಕೆ ಎಟಿಎಂ ಆಗುತ್ತದೆ. ಇನ್ನು ಜೆಡಿಎಸ್ ಬಂದರೆ ತಮ್ಮ ಪರಿವಾರಕ್ಕೆ ಮಾತ್ರ ಎಟಿಎಂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಆಡಳಿತದಲ್ಲಿ ದಲಿತ ಮುಖಂಡ ರಾಮನಾಥ್ ಕೋವಿಂದ್ ಅವರನ್ನು ಮತ್ತು ದಲಿತ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಬಿಜೆಪಿ ದಲಿತರಿಗೆ ಮತ್ತು ದೀನ ದಲಿತರ ಕಲ್ಯಾಣ ಮಾಡುವ ಕಾರ್ಯ ಮಾಡಲಾಗುತ್ತದೆ ಎಂದರು.
ರಾಜ್ಯದ ಅಭಿವೃದ್ಧಿಗಾಗಿ ಹಳೇ ಮೈಸೂರು ಕ್ಷೇತ್ರ ಸೇರಿದಂತೆ ಎಲ್ಲೆಡೆ ಸೇರಿ 140ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.