ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಸ್ವಪಕ್ಷೀಯ ನಾಯಕರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ್ದ ಯತ್ನಾಳ್, ಸಚಿವ ನಿರಾಣಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸದಾ ವಿಶೇಷ ವಿಮಾನದಲ್ಲಿ ತಿರುಗಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಪಂಚಮಸಾಲಿ ಮೀಸಲಾತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದರು.ಯತ್ನಾಳ್ ಸ್ವಪಕ್ಷೀಯ ನಾಯಕರ ವಿರುದ್ಧ ಇಷ್ಟೆಲ್ಲಾ ವಾಗ್ದಾಳಿ ನಡೆಸುತ್ತಿದ್ದರೂ, ಹೈಕಮಾಂಡ್ ಏಕೆ ಸುಮ್ಮನಿದೆ ಎಂಬ ಪ್ರಶ್ನೆ ಸಹಜವಾಗಿ ಕೇಳಿಬಂದಿತ್ತು.
ಯತ್ನಾಳ್ ನಿರಂತರವಾಗಿ ಸ್ವಪಕ್ಷೀಯ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಇದು ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿದೆ. ಹೀಗಾಗಿ ಯತ್ನಾಳ್ ಅವರಿಗೆ ಎಚ್ಚರಿಕೆ ನೀಡುವುದು ಸೂಕ್ತ ಎಂದು ರಾಜ್ಯ ಶಿಸ್ತು ಸಮಿತಿ ಅಭಿಪ್ರಾಯಪಟ್ಟಿತ್ತು. ರಾಜ್ಯ ಶಿಸ್ತು ಸಮಿತಿಯ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಕೇಂದ್ರ ಶಿಸ್ತು ಸಮಿತಿ, ಇದೀಗ ಯತ್ನಾಳ್ ಅವರಿಗೆ ಸ್ಪಷ್ಟನೆ ಕೋರಿ ಫ್ಯಾಕ್ಸ್ ಮೂಲಕ ನೋಟಿಸ್ ಕಳುಹಿಸಿದೆ.