ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ‘ಗುಣ ನಿಯಂತ್ರಣ’ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ (45) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಗಾಯಗೊಂಡಿದ್ದ 9 ಜನರಲ್ಲಿ ಉಳಿದ 8 ಮಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ವಾರದ ಹಿಂದೆ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಇದನ್ನೂ ಓದಿ: ʼನವೆಂಬರ್ ತಿಂಗಳೊಳಗೆ ಹಾಸನ ಫ್ಲೈ ಓವರ್ ಓಪನ್ʼ
ಪ್ರಕರಣದಲ್ಲಿ ಶೇ.40ರಷ್ಟು ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್, ಬಿಬಿಎಂಪಿ (BBMP) ಕ್ವಾಲಿಟಿ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಅಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಪಾಲಿಕೆಯಿಂದ ಕುಟುಂಬಸ್ಥರಿಗೆ ನೌಕರಿ!?
ಪಾಲಿಕೆಯಿಂದ ಮೃತ ಶಿವಕುಮಾರ್ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಲಾಗಿದೆ. ಇದರ ಜೊತೆ ಶಿವಕುಮಾರ್ ಪತ್ನಿಗೆ ಪಾಲಿಕೆಯಲ್ಲಿ ಖಾಯಂ ಉದ್ಯೋಗ ನೀಡಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.
ಡಿ.ಕೆ ಶಿವಕುಮಾರ್ ಸಂತಾಪ
“ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ.
ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟುಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.