ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಪ್ರತಿ ಮನೆಯೊಡತಿಗೆ ಮಾಸಿಕ ₹2 ಸಾವಿರ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆ ಮೈಸೂರಿನಲ್ಲಿ ರಾಜ್ಯ ಸರ್ಕಾರದಿಂದ ಅಧಿಕೃತ ಚಾಲನೆ ಸಿಗಲಿದೆ. ನಾಳೆ ಅದೇ ಸಮಯಕ್ಕೆ ಬಿಬಿಎಂಪಿ ಸಹ ಕಾರ್ಯಕ್ರಮ ಆಯೋಜಿಸಿದ್ದು, ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.
ನಾಳೆ ಏಕಕಾಲಕ್ಕೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿಲಿದ್ದಾರೆ. ಬೆಂಗಳೂರಿನಲ್ಲಿಯೂ ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಟೌನ್ ಹಾಲ್ ನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಗಾಗುತ್ತದೆ.
ಇದನ್ನೂ ಓದಿ; ಗ್ಯಾರಂಟಿ ಯೋಜನೆಗಳಿಗೆ ‘ಬಸವಾದಿ ಶರಣರು’ ಪ್ರೇರಣೆ : ಸಿಎಂ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಭಾಗವಹಿಸಿ, ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 5,64,106 ಜನ ಮನೆಯೊಡತಿಯರು ನೊಂದಣಿ ಮಾಡಿಕೊಂಡಿದ್ದಾರೆ. ನಾಳೆ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಸೇರಿಸಿ ಕಾರ್ಯಕ್ರಮ ನಡೆಸಲು ತಯಾರಿ ನಡೆಸಲಾಗಿದೆ.
ಜತೆಗೆ, ಪ್ರತಿ ವಾರ್ಡನಲ್ಲಿ ಈ ಕಾರ್ಯಕ್ರಮ ನೋಡುವುದಕ್ಕಾಗಿ ಎಲ್ ಇ ಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ. ಬೆಂಗಳೂರಿನ ಟೌನ್ ಹಾಲ್ ನಿಂದ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಬಿಬಿಎಂಪಿ ವ್ಯಾಪ್ತಿಯ ನೋಡಲ್ ಅಧಿಕಾರಿ ಲಕ್ಷ್ಮಿ ದೇವಿ ಮಾಹಿತಿ ನೀಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.