ಕನಕಗಿರಿ: ಕ್ಷೇತ್ರದಲ್ಲಿ ಬಿಜೆಪಿ ಉತ್ತಮ ಕೆಲಸ ಮಾಡುತ್ತಿರುವುದರಿಂದ ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದ ಗೆಲುವು ನಿಶ್ಚಿತ ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.
ಪಟ್ಟಣದ 13ನೇ ವಾರ್ಡ್‌ನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೂತ್ ಮಟ್ಟದ ಮನೆ- ಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಉತ್ತುಂಗಕ್ಕೆ ಬೆಳೆಯುತ್ತಿದೆ. ಸ್ಥಳೀಯ ಮಟ್ಟದಲ್ಲಿ ಪಕ್ಷಕ್ಕೆ ಮತ್ತಷ್ಟುಬಲ ತುಂಬುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿ ಮನೆ- ಮನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ತಲುಪಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ನೀರಾವರಿ, ಸಹಕಾರಿ, ಕಂದಾಯ, ಆರೋಗ್ಯ, ಧಾರ್ಮಿಕ, ಕ್ರೀಡೆ ಸೇರಿದಂತೆ ನಾನಾ ರಂಗಗಳಲ್ಲಿ ಉತ್ತಮವಾಗಿ ಕೆಲಸ ಮಾಡಿರುವ ಸಚಿವರು ಸರ್ಕಾರಕ್ಕೆ ಕೀರ್ತಿ ತಂದಿದ್ದಾರೆ. ಇಂತಹ ಸಂದರ್ಭವನ್ನು ಸದ್ಬಳಕೆ ಮಾಡಿಕೊಂಡು ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕಾದ ಕೆಲಸ ನಮ್ಮದಾಗಬೇಕು, ರಾಜ್ಯದ ಅಭಿವೃದ್ಧಿಗೆ ವೇಗ ಕೊಟ್ಟಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.