ಆನೇಕಲ್: ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೆಟ್ಟ ಹೆಸರು ತರಲು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಹತಾಶೆಯಲ್ಲಿ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ. ಸಿಡಿ ವಿಚಾರದ ಬಗ್ಗೆ ತನಿಖೆ ನಡೆಯಲಿ ಎಂದು ಹೇಳಿದರು.
ಕೆಲಸ ಮಾಡಿ ಮತ ಪಡೆದುಕೊಳ್ಳಬೇಕು ಎನ್ನುವ ಮನೋಭಾವ ಬಿಜೆಪಿ ಬಳಿ ಇಲ್ಲ. ಅದಕ್ಕಾಗಿ ಸಣ್ಣಪುಟ್ಟ ತಪ್ಪುಗಳನ್ನು ಹುಡುಕಿ ಇಮೇಜ್ ಡ್ಯಾಮೇಜ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಮೇಲೂ ಹೀಗೆ ಆರೋಪ ಮಾಡಿದ್ದರು ಎಂದು ದೂರಿದರು.
ಏನಾದರು ಮಾಡಿ ಚುನಾವಣೆಯಲ್ಲಿ ಗೆಲ್ಲಬೇಕೆಂದು ದೆಹಲಿ ನಾಯಕರು ಮತ್ತು ಇಲ್ಲಿನ ಸ್ಥಳೀಯ ನಾಯಕರು ಸೇರಿಕೊಂಡು ಡಿ.ಕೆ. ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ಚುನಾವಣೆ ಹತ್ತಿರವಾಗುತ್ತಿರುವ ಕಾರಣ ತಿಂಗಳಿಗೆ ನಾಲ್ಕು ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಮತ್ತೆ ಅವರು ಕರ್ನಾಟಕದ ಕಡೆ ಮುಖ ಹಾಕುವುದಿಲ್ಲ. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ವೋಟ್ ಕೇಳುತ್ತಿದೆ ಎಂದು ಟೀಕಿಸಿದರು.