ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಕಚೇರಿ ಮುಂದೆ ಹಾಜರಾಗಿದ್ದಾರೆ.
ನಿರೀಕ್ಷಣಾ ಜಾಮೀನು ಪಡೆದು 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿತ್ತು. ಹೀಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ ಮಾಡಾಳ್, ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿ ಲೋಕಾಯುಕ್ತ ಕಚೇರಿಯತ್ತ ತೆರಳಿದ್ದರು.
ಕೆಎಸ್ ಡಿ ಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು, 40 ಲಕ್ಷ ಲಂಚ ಸ್ವೀಕಾರ ಮಾಡುತ್ತಿದ್ದ ಸಂದರ್ಭದಲ್ಲಿ ಲೋಕಾಯಕ್ತ ಪೋಲೀಸರಿಗೆ ಸಿಕ್ಕಿಬಿದ್ದಿದ್ದರು. ಬಳಿಕ ಅವರ ಕಚೇರಿ ಹಾಗೂ ನಿವಾಸದಲ್ಲಿ ತಪಾಸಣೆಯ ವೇಳೆ ಸುಮಾರು ಎಂಟು ಕೋಟಿ ನಗದು ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಲೋಕಾಯಕ್ತ ಪೊಲೀಸ್ ಮಾಡಾಳ್ ವಿರೂಪಾಕ್ಷಪ್ಪ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಲೋಕಾಯಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಎ 1 ಆರೋಪಿಯನ್ನಾಗಿ ಮಾಡಿದ್ದಾರೆ ಹಾಗೂ ಪ್ರಶಾಂತ್ ಮಾಡಾಳ್ ಅವರನ್ನು ಎ2 ಆಗಿ ಪರಿಗಣಿಸಿತ್ತು.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಡಾಳ್ , ನಾನು ಹಾರ್ಟ್ ಪೇಶೆಂಟ್, ನನಗೆ ತೊಂದರೆ ಕೊಡಬೇಡಿ.. ಲೋಕಾಯುಕ್ತ ಕಚೇರಿಗೆ ಹಾಜರಾಗುತ್ತೇನೆ ಎಂದಷ್ಟೇ ಹೇಳಿ ನಿರ್ಗಮಿಸಿದರು. ಹೈಕೋರ್ಟ್ ಆದೇಶದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಈಗ ಲೋಕಾಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ.