ನವದೆಹಲಿ: ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮುಂದಿನ ಚುನಾವಣೆಗಾಗಿ ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಗಾಗಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಸದ್ಯ ದೆಹಲಿ ತಲುಪಿದ್ದಾರೆ.
ಈ ಬಗ್ಗೆ ಮಾತನಾಡಿರುವ ಯಡಿಯೂರಪ್ಪ, ಇಂದು ಸಂಜೆ 5 ಗಂಟೆಗೆ ಸಭೆ ಇದೆ. ಪ್ರಧಾನಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ. ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.
ಇನ್ನು ಈಗಾಗಲೇ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ: ಇಂದು ಬಿಎಸ್‌ವೈ ದೆಹಲಿ ಪ್ರವಾಸ ; ಫೈನಲ್ ಆಗುತ್ತಾ ಬಿಜೆಪಿ-ಜೆಡಿಎಸ್ ಮೈತ್ರಿ?
ಉಲ್ಟಾ ಹೊಡೆದ ಯಡಿಯೂರಪ್ಪ : ಕಳೆದ ವಾರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಯಡಿಯೂರಪ್ಪ, ಬಿಜೆಪಿ-ಜೆಡಿಎಸ್ ಮೈತ್ರಿಯಾಗಲಿದೆ. ಜೆಡಿಎಸ್‌ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ, ಯಡಿಯೂರಪ್ಪ ಹೊರತುಪಡಿಸಿ ಬೇರೆ ಯಾವ ನಾಯಕರೂ ಕಮಲ-ದಳ ಮೈತ್ರಿ ಕುರಿತು ಖಚಿತಪಡಿಸಿರಲಿಲ್ಲ.
ಇಂದು ದೆಹಲಿಯಲ್ಲಿ ಮೋದಿ ಅವರೊಂದಿಗೆ ಸಭೆ ಮುಕ್ತಾಯವಾದ ಬಳಿಕ ಮೈತ್ರಿ ವಿಚಾರಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.