ಕೊಪ್ಪಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ನಾನೇ ಸಿಎಂ ಎಂದು ಹೇಳಿಕೊಂಡು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯಲ್ಲಿ ಒಗ್ಗಟ್ಟಿದೆ. ಇಲ್ಲಿ ಯಾರನ್ನು ಯಾರೂ ಕಡೆಗಣನೆ ಮಾಡುತ್ತಿಲ್ಲ ಎಂದು ಹೇಳಿದರು.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಸದ್ಯ ಗಂಗಾವತಿಯಲ್ಲಿ ಮನೆ ಮಾಡಿದ್ದರಿಂದ ಈ ಗೊಂದಲ ಉಂಟಾಗಿದೆ. ಆದರೆ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ನಮ್ಮೊಂದಿಗೆ ಇರುತ್ತಾರೆ, ಜನಾರ್ದನ ರೆಡ್ಡಿ ಅವರ ವಿರುದ್ಧ ಇನ್ನಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಅವುಗಳು ಮುಗಿದ ನಂತರ ಅವರು ಬಿಜೆಪಿಯಲ್ಲಿರುತ್ತಾರೆ.
ಪ್ರಿಯಾಂಕ್ ಖರ್ಗೆ ಬಿಜೆಪಿ ಮೂರು ಬಾಗಿಲು ಎನ್ನುತ್ತಾರೆ. ಅದು ಅವರ ದೌರ್ಬಲ್ಯವನ್ನು ತೋರಿಸುತ್ತದೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನನಗಿರುವುದು ಒಂದೇ ಆಸೆ, ಅದು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರೋದು. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕೆನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ ಎಂದರು.