ಬೆಂಗಳೂರು : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಉಡುಪಿಯಲ್ಲಿ ಬಂಧಿತರಾಗಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದಾರೆ.
ಪೊಲೀಸ್ ವಾಹನದಲ್ಲಿ ಬೆಂಗಳೂರು ಸಿಸಿಬಿ ಕಚೇರಿಗೆ ಬಂದಿಳಿದ ಚೈತ್ರಾ, ಮುಖ ಮುಚ್ಚಿಕೊಂಡು ಕಚೇರಿ ಒಳಗೆ ಓಡಿ ಹೋದರು. ಚೈತ್ರಾ ಅವರನ್ನು ಇಂದು ಸಂಜೆ 4 ಗಂಟೆಯ ವೇಳೆಗೆ ಸಿಸಿಬಿ ಪೊಲೀಸರು ನಗರದ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ಇದನ್ನೂ ಓದಿ : ಕುಮಾರಕೃಪಾದಲ್ಲಿರಲು ʼಚೈನ್ ಚೈತ್ರಾʼಗೆ ಯಾರ ಕೃಪೆ ಇತ್ತು?: ಕಾಂಗ್ರೆಸ್
ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಮತ್ತು ಆಕೆಯ ತಂಡ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ ಹಣ ಪಡೆದು ವಂಚಿಸಿದ್ದರು. ಈ ಬಗ್ಗೆ ಗೋವಿಂದ ಬಾಬು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳಾದ ಗಗನ್ ಕಡೂರು ಮತ್ತು ಪ್ರಸಾದ್ ಎಂಬುವವರನ್ನು ಬಂಧಿಸಿದ್ದರು.
ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಚೈತ್ರಾ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬವರನ್ನು ನಿನ್ನೆ (ಸೆ.12) ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.