ಅಮರಾವತಿ: ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಂಧನ ವಿರೋಧಿಸಿ ತೆಲುಗು ದೇಶಂ ಪಕ್ಷ (ಟಿಡಿಪಿ) ಕರೆ ನೀಡಿದ್ದ ಬಂದ್ ಹಿಂಸಾರೂಪ ಪಡೆದುಕೊಂಡಿದೆ. ಹಲವು ಕಡೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಲಾಠಿ ಚಾರ್ಜ್ ಸಹ ನಡೆಸಲಾಗಿದೆ.
ಹಲವು ಕಡೆ ಅವರ ಬೆಂಬಲಿಗರು ರಸ್ತೆ ತಡೆ ನಡೆಸಿದ್ದರು ಈ ವೇಳೆ ರಸ್ತೆಗಿಳಿದಿದ್ದ ಬಸ್‌ಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಅಲ್ಲದೆ ರಸ್ತೆ ಮೇಲೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಈ ವೇಳೆ ಗಲಾಟೆಗಳು ನಡೆದಿವೆ. ಹೀಗಾಗಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಮುಂಜಾಗ್ರತಾ ಕ್ರಮವಾಗಿ ಹಲವಾರು ಮಂದಿ ಪ್ರತಿಭಟನಾಕಾರರ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕುರಿತು ಮೋದಿ ಕಳವಳ
ಮಾಜಿ ಮುಖ್ಯಮಂತ್ರಿಗಳ ಬಂಧನಕ್ಕೂ ಮುನ್ನ ಜೈಲಿನಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಪೊಲೀಸ್ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥರನ್ನು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಟಿಡಿಪಿ ಕಾರ್ಯಕರ್ತರು ವಿಜಯವಾಡ ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿದ್ದರು. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜಮಂಡ್ರಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
ಇದನ್ನೂ ಓದಿ: ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯಕ್ಕೆ ಬಿಎಸ್‌ವೈ ಭೇಟಿ
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮೇಲೆ 371 ಕೋಟಿ ರೂ. ಹಗರಣ ಎಸಗಿದ ಗಂಭೀರ ಆರೋಪ ಮೇಲೆ ಸಿಐಡಿ ಪೊಲೀಸರು ಬಂಧಿಸಿದ್ದರು. ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಎಸಗಿದ ಆರೋಪ ಇರುವ ಹಿನ್ನೆಲೆಯಲ್ಲಿ ಹೈದರಾಬಾದಿನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ನಂದ್ಯಾಳದಲ್ಲಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.