Friday, September 29, 2023
spot_img
- Advertisement -spot_img

‘ರೈತರ ಸಂಕಷ್ಟದಲ್ಲಿ ಬಿಜೆಪಿಯವ್ರು ರಾಜಕಾರಣ ಮಾಡ್ತಿದ್ದಾರೆ’

ಬರ ಘೋಷಣೆಗೆ ಮಾನದಂಡಗಳನ್ನು ಮರುಪರಿಶೀಲಿಸಬೇಕೆಂದು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ, ಇಲ್ಲಿಯವರೆಗೆ ಉತ್ತರ ಬಂದಿಲ್ಲ. ಕೇಂದ್ರದ ಮೇಲೆ ಒತ್ತಡ ಹೇರಬೇಕಾಗಿದ್ದ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ರೈತರ ಸಂಕಷ್ಟದಲ್ಲಿ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ಧ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್‌) ಅಂಶವೆಂದು ಪರಿಗಣಿಸಬೇಕು ಎಂದಿದ್ದಾರೆ.

ಇದನ್ನೂ ಓದಿ : ಇಡೀ ದೇಶದ ಪತ್ರಕರ್ತರಿಗೆ ಮೋದಿ ನಿಷೇಧ ಹೇರಿದ್ದಾರಲ್ಲ?: ಸಿದ್ದರಾಮಯ್ಯ

ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು ಆಗ್ರಹಿಸಿದ್ದಾರೆ.

ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿದೆ. ಇದು ಸಹ ಬರ ಘೋಷಣೆಯ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ಇದು ಇನ್‌ಪುಟ್‌ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದ್ದು, ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳೆಹಾನಿ ಸಹಾಯಧನಕ್ಕೆ ಅರ್ಹತೆ ಪಡೆಯಲು ಬರನಿರ್ವಹಣೆ ಕೈಪಿಡಿ 2016 ರಲ್ಲಿನ ನಿಯಮಗಳು ಹಾಗೂ ಎಸ್‌ ಡಿ ಆರ್‌ ಎಫ್‌ / ಎನ್‌ ಡಿ ಆರ್‌ ಎಫ್‌‌ ನಿಯಮಾವಳಿಗಳನ್ನು ಸಮೀಕರಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಬರದಿಂದ ಉಂಟಾಗುವ ಸಂಕಷ್ಟವನ್ನು ಎದುರಿಸಲು ವಿಮೆಯ ಪಾತ್ರವು ಮಹತ್ವದ್ದಾಗಿದೆ. ಪ್ರಸಕ್ತ ವ್ಯವಸ್ಥೆಯಲ್ಲಿ ತಮ್ಮ ಹಕ್ಕಿನ ವಿಮೆಯ ಹಣವನ್ನು ಪಡೆಯುವಲ್ಲಿ ರೈತರು ಅನೇಕ ಸಂದರ್ಭಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ಇನ್‌ಪುಟ್‌ ಸಬ್ಸಿಡಿಯ ವಿತರಣೆಯನ್ನು ವಿಮಾ ಕಂಪನಿಗಳು ಬೆಳೆ ನಾಶವಾಗಿರುವ ಸಂಬಂಧ ವಿಮಾ ಪರಿಹಾರ ನೀಡಲು ಪುರಾವೆಯಾಗಿ ಪರಿಗಣಿಸಬೇಕು. ಇದರಿಂದ ಸರಳವಾಗಿ ರೈತರಿಗೆ ಪರಿಹಾರ ದೊರೆಯುತ್ತದೆ. ಈ ನಿಟ್ಟಿನಲ್ಲಿ ಮಾನದಂಡಗಳಲ್ಲಿ ಪರಿಷ್ಕರಣೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles