ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕಮಾಂಡ್ ಜೊತೆ ವಿಸ್ತೃತ ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ಒಂದು ಸಭೆ ನಡೆಸಲಿದೆ. ಈ ವೇಳೆ ದಿನಾಂಕ ನಿಗದಿಯಾಗಲಿದೆ. ಆದಷ್ಟು ಬೇಗನೆ ಒಂದು ಸಭೆ ನಡೆಸಿ, ಈ ಬಗ್ಗೆ ತೀರ್ಮಾನವಾಗಲಿದೆ ಎಂದರು.
ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ. ಎಲ್ಲ ವಿಚಾರವನ್ನು ಕೇಂದ್ರ ನಾಯಕರಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.
ಜಿಲ್ಲಾವಾರು, ಪ್ರಾದೇಶಿಕವಾರು ಹಾಗೂ ಸಾಮಾಜಿಕವಾಗಿ ಸ್ಥಾನ ನೀಡುವ ಬಗ್ಗೆಯೂ ಚರ್ಚೆಯಾಗಿದೆ. ವರಿಷ್ಠರಿಗೆ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಲಾಗಿದೆ, ಸಚಿವ ಸಂಪುಟ ವಿಸ್ತರಣೆ ಒಂದು ಪ್ರಕ್ರಿಯೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಆಯಾಮಗಳನ್ನು ಗಮನದಲ್ಲಿರಿಸಿಕೊಂಡು ಹೈಕಮಾಂಡ್ ನಾಯಕರು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ. ಈಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಅಂತಿಮ ಘಟ್ಟಕ್ಕೆ ಬಂದಿದ್ದೇವೆ’ ಎಂದು ಹೇಳಿದ್ದರು.
ಪ್ರಸ್ತುತ ಬೊಮ್ಮಾಯಿ ಸಂಪುಟದಲ್ಲಿ ಐದು ಸಚಿವ ಸ್ಥಾನಗಳು ಖಾಲಿ ಇವೆ. ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಜಾತಿ ಮತ್ತು ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ ಎನ್ನಲಾಗುತ್ತಿದೆ.