ಬೆಂಗಳೂರು : ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಧಿಕಾರಿಗಳ ತಂಡ ಬೊಮ್ಮಾಯಿ ಹೆಲಿಕಾಪ್ಟರ್ ಪರಿಶೀಲನೆ ನಡೆಸಿತು. ಸದ್ಯ ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಬೊಮ್ಮಾಯಿ, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ನಂತರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೂ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಗುರುವಾರ ಕೊಲ್ಲೂರಿಗೂ ತೆರಳಲಿದ್ದು, ಕಟೀಲು ದೇಗುಲ, ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ. ಅಂದಹಾಗೆ ಈ ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್ ಘೋಷಣೆ ಬೆನ್ನಲ್ಲೇ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ಕೆಲ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ.