ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಾಗ್ದಾನ ಈಡೇರಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಬೆಳಿಗ್ಗೆ ಚಾಮುಂಡೇಶ್ವರಿ ದೇವಿಗೆ ಹರಕೆ ಸಲ್ಲಿಸಿದರು.
ಒಂದೇ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಮತ್ತು ಡಿಸಿಎಂ, ಚಾಮುಂಡಿ ದೇವಿಗೆ ಹಸಿರು ಮತ್ತು ಕೆಂಪು ಬಣ್ಣದ ಸೀರೆ ನೀಡಿ ಹರಕೆ ತೀರಿಸಿದರು. ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದರು.
ಚುನಾವಣೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗ್ಯಾರಂಟಿ ಕಾರ್ಡ್‌ಗಳನ್ನು ಚಾಮುಂಡಿ ದೇವಿ ಮುಂದೆ ಇಟ್ಟು ಪೂಜೆ ಸಲ್ಲಿಸಿದ್ದರು. ಗ್ಯಾರಂಟಿ ಈಡೇರಿಕೆಗೆ ಹರಕೆ ಹೊತ್ತಿದ್ದರು. ಇದೀಗ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದ್ದು, ಗ್ಯಾರಂಟಿ ಯೋಜನೆಗಳೂ ಜಾರಿಯಾಗ್ತಿವೆ. ಈ ಹಿನ್ನೆಲೆ ಹರಕೆ ತೀರಿಸಿದ್ದಾರೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿಗೆ ನಾಳೆ (ಆಗಸ್ಟ್ 30) ನಗರದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಂಕಾ ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೈಸೂರಿನಲ್ಲೇ ಇದ್ದು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.