ಬೆಂಗಳೂರು: ಕ್ರೈಸ್ತ ಸಮುದಾಯದ ಅನುಕೂಲಕ್ಕಾಗಿ ಶೀಘ್ರವೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು. ಜೊತೆಗೆ ನಿಗಮಕ್ಕೆ ಅಧ್ಯಕ್ಷರನ್ನೂ ನೇಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರಿನ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್‌ನಲ್ಲಿ ನಿನ್ನೆ ಮೇರಿ ಹಬ್ಬದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ನಾವು ಬಜೆಟ್‌ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ ನೂರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟು, ಆದಷ್ಟು ಬೇಗ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದರು.
ʼಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ, ಅವರಿಗೆ ಕಾನೂನಿನ ಮೂಲಕ ತಕ್ಕ ಶಾಸ್ತಿ ಆಗಲಿದೆ ಎಂದೂ ಎಚ್ಚರಿಸಿದರು.
ಇದನ್ನೂ ಓದಿ: ‘ಗೃಹಲಕ್ಷ್ಮಿ’ ಉದ್ಘಾಟನೆಗೆ ಬಿಬಿಎಂಪಿ ಸಜ್ಜು; ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ
ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ಹೆಸರು: ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದೂ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.