ಬೆಂಗಳೂರು: ”ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ತಮ್ಮ ಫೋನ್ ಸಂಭಾಷಣೆಯಲ್ಲಿ ನಡೆದ ಮಾತುಕತೆಗೆ ಸಂಬಂಧಿಸಿದಂತೆ ದಾಖಲೆಗಳ ಸಮೇತ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಅವರು, ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎಂದು ಹೇಳಿದ್ದಾರೆ.
ಇದನ್ನೂ ಓದಿ : ದ್ವೇಷ ಭಾಷಣ ಕೇಸ್: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರವುಳ್ಳ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದೇನೆ ಎನ್ನುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಬರುತ್ತಿರುವ ಆರೋಪಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಜರಿದಿದ್ದಾರೆ.


ವೈರಲ್ ಆಗಿದ್ದ ಸಿಎಂ ಪುತ್ರ ಡಾ.ಯತೀಂದ್ರ ಆಡಿಯೋ: ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಸೂಚಿಸಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ತಾಕೀತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪೋಸ್ಟಿಂಗ್ ವಿಚಾರವಾಗಿ ಸಿಎಂ ಜೊತೆ ಮಾತನಾಡಿರುವ ಯತೀಂದ್ರ ಅವರು, ನಾನು ಹೇಳಿದಷ್ಟು ಮಾತ್ರ ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿತ್ತು. ಈ ಕುರಿತು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಲು ಆಗ್ರಹಿಸಿದ್ದರು. ಅಲ್ಲದೆ ಹಲವು ರಾಜಕಾರಣಿಗಳು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.