ಮೈಸೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಗಂಭೀರ ಚಿಂತನೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಧಮ್ಮಿದ್ರೆ ಬ್ಯಾನ್ ಮಾಡಿ ಎಂದು ಸವಾಲು ಹಾಕುವ ಬಿಜೆಪಿಗೆ ತಿರುಗೇಟು ನೀಡಿರುವ ಅವರು, ಈ ನಿಟ್ಟಿನಲ್ಲಿ ತಮಿಳುನಾಡು ಮಾದರಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದ ಪತ್ರವನ್ನು ಸಮರ್ಥಿಸಿಕೊಂಡರು. ದುಷ್ಟ ಶಕ್ತಿಗಳು ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಇಂಥ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ತಮಿಳುನಾಡಿನಲ್ಲಿ ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೆ ತನ್ನಿ ಎಂದು ಅವರು ಪತ್ರ ಬರೆದಿದ್ದಾರೆ. ಇದರಲ್ಲಿ ತಪ್ಪೇನಿದೆ? ಪ್ರಿಯಾಂಕ್ ಖರ್ಗೆ ಪತ್ರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಮಿಳುನಾಡಿನಲ್ಲಿ ಹೊರಡಿಸಲಾದ ನಿಷೇಧ ಆದೇಶದ ಸಂಪೂರ್ಣ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಹರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ, ಅದರ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ಇನ್ನು ಬಿಜೆಪಿಯವರು ಯಾವಾಗಲೂ ಧಮ್ಮಿದ್ರೆ ಬ್ಯಾನ್ ಮಾಡಿ, ಧಮ್ಮಿದ್ರೆ ಬನ್ನಿ ಅಂತಾರೆ. ಕಳೆದ ಚುನಾವಣೆಯಲ್ಲೂ ಹೀಗೆಯೇ ಕರೆದಿದ್ದರು. ಅವರ ಸ್ಥಿತಿ ಏನಾಯಿತು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಸಿಎಂ ಅವರ ಈ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ಆರ್‌ಎಸ್‌ಎಸ್ ನಡುವಿನ ಸಂಘರ್ಷಕ್ಕೆ ಮುನ್ನುಡಿ ಬರೆಯುವ ಸಾಧ್ಯತೆ ಇದೆ. ಒಂದು ವೇಳೆ ಸರ್ಕಾರ ಈ ನಿರ್ಧಾರಕ್ಕೆ ಬದ್ಧವಾದರೆ ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ.