ಬೆಂಗಳೂರು: ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮೂರು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಇವೆಲ್ಲವೂ ಕರ್ನಾಟಕವನ್ನು ಅತ್ಯಂತ ಭ್ರಷ್ಟ ರಾಜ್ಯ ಎಂದು ಪರಿಗಣಿಸಿದೆ ಎಂದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 59 ಭ್ರಷ್ಟಾಚಾರದ ಆರೋಪಗಳನ್ನು ಭ್ರಷ್ಟಾಚಾರ ನಿಗ್ರಹ ದಳದ ಮುಂದೆ ಸಲ್ಲಿಸಲಾಗಿತ್ತು.
ಆರೋಪಗಳ ತನಿಖೆ ಮಾಡುವ ಬದಲು ಲೋಕಾಯುಕ್ತವನ್ನು ಶಕ್ತಿಹೀನಗೊಳಿಸಿದರು. ಕಾಂಗ್ರೆಸ್ ಸದಸ್ಯರು ಮತ್ತು ಸಿವಿಲ್ ಕಾಂಟ್ರಾಕ್ಟ್ ಅಸೋಸಿಯೇಷನ್ ನಮ್ಮ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪಗಳನ್ನು ಮಾಡಿದರು. ಈ ವೇಳೆ ನಾನು ಲೋಕಾಯುಕ್ತ ಅಥವಾ ನ್ಯಾಯಾಲಯಕ್ಕೆ ಪುರಾವೆಗಳನ್ನು ಒದಗಿಸುವಂತೆ ಕೇಳಿದೆ, ಆದರೆ ಅವರು ಸಾಕ್ಷ್ಯಾಧಾರಗಳನ್ನು ಒದಗಿಸಲಿಲ್ಲಎಂದು ತಿಳಿಸಿದರು.
ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸುತ್ತಿದೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರರನ್ನ ರಕ್ಷಣೆ ಮಾಡುತ್ತಿದ್ದರು. ಇದೀಗ ಅವರ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.