ಬೆಂಗಳೂರು: ನನ್ನ ಮೇಲೆ ಆಗ ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂದ ಅಪಪ್ರಚಾರ ಮಾಡಿದವರೆಲ್ಲಾ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ರಾಜ್ಯ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
ಮಾಂಸಾಹಾರ ತಿಂದು ನಾನು ದೇವಸ್ಥಾನಕ್ಕೆ ಹೋಗಿದ್ದಕ್ಕೆ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದರು ಎಂದರು. “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕಿಡಿಕಾರಿದರು.
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ಅಭಿಪ್ರಾಯಪಟ್ಟರು.