ಭಟ್ಕಳ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸಾಹಾರ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದರು ಎನ್ನಲಾದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭಟ್ಕಳ ಶಾಸಕ ಸುನೀಲ್ ನಾಯ್ಕ್ ಅವರ ಮನೆಯಲ್ಲಿ ಮಾಂಸಾಹಾರ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಸಿಟಿರವಿ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಿಜೆಪಿ ಶಾಸಕ ಸುನೀಲ್ ನಾಯ್ಕ ಪ್ರತಿಕ್ರಿಯಿಸಿದ್ದು, ಸಿ.ಟಿ.ರವಿ ಮಾಂಸಾಹಾರ ಸೇವಿಸಿಲ್ಲ. ಅವತ್ತು ಮಾಂಸದ ಅಡುಗೆ ಮಾಡಿರಲಿಲ್ಲ. ಚಪಾತಿ, ಗೋಬಿಮಂಚೂರಿ, ಅನ್ನ, ರಸಂ ಮಾತ್ರ ಸೇವಿಸಿದ್ದಾರೆ. ವಿವಾದ ಸೃಷ್ಟಿ ಮಾಡಲು ಫೋಟೋ ವೈರಲ್ ಮಾಡಲಾಗುತ್ತಿದೆ. ಸಿ.ಟಿ.ರವಿ ಜೊತೆ ನಾವೆಲ್ಲ ಒಟ್ಟಿಗೆ ಕುಳಿತು ಊಟ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ವಿವಾದ ಸಂಬಂಧ ಇದಕ್ಕೂ ಮುಂಚೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಭೂತದ ಬಾಯಲ್ಲಿ ಭಗವದ್ಗೀತೆ ಎಂದು ಜನರಿಗೆ ಗೊತ್ತಾಗಿದೆ. ಬಿಜೆಪಿಯವರಿಗೆ ಯಾವಾಗಲೂ ಸ್ಪಷ್ಟವಾದ ವಿಚಾರಧಾರೆ ಇಲ್ಲ. ಇದು ಚರ್ಚೆ ಮಾಡಬೇಕಾದ ವಿಷಯಗಳೇ ಅಲ್ಲ. ಬಿಜೆಪಿಯವರು ಸುಳ್ಳು ಹೇಳ್ತಾರೆ ಅಂತಾ ರಾಜ್ಯದ ಜನರಿಗೆ ಗೊತ್ತಿದೆ ಎಂದಿದ್ದರು.