ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳೂ ಸಜ್ಜಾಗುತ್ತಿದ್ದು, ಮುಂದಿನ ವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ.
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆದಿದೆ. ಮುಂದಿನ ವಾರಾಂತ್ಯದ ಒಳಗೆ ಕಾಂಗ್ರೆಸ್ ಪಕ್ಷದ 120 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಭೆ, ಅಂತಿಮ ನಮನ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ನಾಯಕರು ಕಳೆದ ಎರಡು ದಿನಗಳಿಂದ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆಯುತ್ತಿದ್ದ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಈಗಾಗಲೇ ಮೊದಲ ಪಟ್ಟಿಯ ಅಭ್ಯರ್ಥಿಗಳನ್ನು ಒಳಗೊಂಡ ಮಾಹಿತಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ಆದಷ್ಟು ಬೇಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದೇವೆ. ರಾಜ್ಯ ಕಾಂಗ್ರೆಸ್ ನಾಯಕರು ಜೊತೆ ಹೈಕಮಾಂಡ್ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನೊಂದು ವಾರದಲ್ಲಿ ಕಾಂಗ್ರೆಸ್ನ ಮೊದಲ ಪಟ್ಟಿ ಬಿಡುಗಡೆ ಆಗುವ ನಿರೀಕ್ಷೆ ಹೊಂದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ.