ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮತ್ತು ಭಾರತದ ಜನತೆಗಾಗಿ ಈ ದೊಡ್ಡ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಅಧಿಕಾರ ಹಸ್ತಾಂತರ ಮಾಡಿದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಸೋನಿಯಾ ಗಾಂಧಿ, “ನನಗೆ ಎಲ್ಲರಿಗಿಂತ ಹೆಚ್ಚು ಖುಷಿಯಾಗಿದೆ. ತಮ್ಮ ನಿಷ್ಠೆ, ಪ್ರಾಮಾಣಿಕತೆಯಿಂದ ಮಲ್ಲಿಕಾರ್ಜುನ ಖರ್ಗೆ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಅವರು ನನಗೆ ತೋರಿಸಿರುವ ಪ್ರೀತಿ, ಗೌರವಕ್ಕೆ ಅಭಾರಿಯಾಗಿದ್ದೇನೆ” ಎಂದು ಹೇಳಿದರು. ಇನ್ನೂ “ನನ್ನ ಶಕ್ತಿ, ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಭಾವಿಸಿದ್ದೇನೆ” ಎಂದು ಸೋನಿಯಾ ಗಾಂಧಿ ಭರವಸೆ ವ್ಯಕ್ತಪಡಿಸಿದರು.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದರು. 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇನ್ನು ಮುಂದೆ ಕಾಂಗ್ರೆಸ್ ನ್ನು ಮುನ್ನಡೆಸಲಿದ್ದಾರೆ. 1972 ರಿಂದ 2008ರ ತನಕ 9 ಬಾರಿ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದಾರೆ.
2009 ರಿಂದ 2019ರ ತನಕ 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರು ಹಾಜರಾಗಿದ್ದರು.