ನವದೆಹಲಿ: ಸೆಪ್ಟೆಂಬರ್ 18ರಿಂದ 22ರವರೆಗೆ ನಡೆಯಲಿರುವ ಸಂಸತ್ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ನೀಡುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿಗೆ ಅವರಿಗೆ ಸೋನಿಯಾ ಗಾಂಧಿ ಅವರು ಬರೆದ ಪತ್ರದಲ್ಲಿ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ. ಜೊತೆಗೆ ಮುಂಬರುವ ಅಧಿವೇಶನದಲ್ಲಿ ಅವುಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವಿರೋಧ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪತ್ರದಲ್ಲಿ ಹೇಳಿದ್ದಾರೆ. ಅಧಿವೇಶನದಲ್ಲಿ ವಿರೋಧ ಪಕ್ಷಗಳು ಚರ್ಚೆ ಮಾಡಲು ಬಯಸಿರುವ ವಿಷಯಗಳ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ.
ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಚರ್ಚೆ: ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಸಭೆ ಕರೆದ ಸೋನಿಯಾ
ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡದೆ ವಿಶೇಷ ಅಧಿವೇಶನ ಕರೆಯಲಾಗಿದೆ. ಇದರ ಅಜೆಂಡಾ ಏನು ಎನ್ನುವುದರ ಬಗ್ಗೆ ಯಾರಿಗೂ ಗೊತ್ತಿಲ್ಲ. ಸಾರ್ವಜನಿಕ ಕಾಳಜಿ ಹಾಗೂ ಮಹತ್ವದ ವಿಷಯಗಳನ್ನು ಚರ್ಚೆ ಮಾಡುವ ಅವಕಾಶ ಸಿಗುವುದರಿಂದ ಈ ಅಧಿವೇಶನದಲ್ಲಿ ಭಾಗವಹಿಸಲು ನಾವೂ ತೀರ್ಮಾನಿಸಿದ್ದೇವೆ. ಈ ವಿಷಯಗಳನ್ನು ಪ್ರಸ್ತಾಪಿಸಲು ಸಂಬಂಧಪಟ್ಟ ನಿಮಯಗಳಡಿ ಸಮಯ ಸಿಗಬಹುದು ಎಂದು ಭಾವಿಸಿದ್ದೇನೆ ಎಂದಿದ್ದಾರೆ.
ದೇಶದ ಆರ್ಥಿಕ ಪರಿಸ್ಥಿತಿ, ಬೆಲೆ ಏರಿಕೆ, ನಿರುದ್ಯೋಗ, ಕನಿಷ್ಠ ಬೆಂಬಲ ಬೆಲೆ, ಮಣಿಪುರ ಗಲಭೆ, ಚೀನಾ ಅತಿಕ್ರಮಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ಸಿಗುವ ನಿರೀಕ್ಷೆ ಇದೆ ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.