ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಕಾಂಗ್ರೆಸ್ ನಾಯಕರು ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ.
ಪ್ರತಿಭಟನೆ ವೇಳೆ ಪೋಸ್ಟರ್, ಸೂಟ್ಕೇಸ್, ಹಣವಿರುವ ಗುಟ್ಕಾ ಬ್ಯಾಗ್, ನಕಲಿ ನೋಟ್ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ .
ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ದಾವಣಗೆರೆ ಜಿಲ್ಲೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದಿದ್ದು ಅವರ ನಿವಾಸದಲ್ಲಿ 8 ಕೋಟಿ ನಗದು ಸಿಕ್ಕಿದೆ,
ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮೀಷನ್ ದಂದೆ ಬಯಲಾಗಿದೆ. ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಜೊತೆಗೆ ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆ ಈಗ ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.