ಬಳ್ಳಾರಿ : ಪಕ್ಷ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನ ರೆಡ್ಡಿ ಬೆಂಬಲಿಗರಾದ ದಮ್ಮೂರು ಶೇಖರ್ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆದ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಹಲವು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವು ಜವಾಬ್ದಾರಿ ನಿಭಾಯಿಸಿದ್ದೇನೆ ಎಂದರು.
ಇತ್ತೀಚೆಗೆ ಜನಾರ್ದನ ರೆಡ್ಡಿ ಪತ್ರಿಕಾಗೋಷ್ಠಿ ನೋಡಿ ನಾನು ತುಂಬಾ ನೊಂದಿದ್ದೆ, ನನ್ನನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷನನ್ನಾಗಿಸಿ ಸೇವೆ ಕೈಗೊಳ್ಳಲು ಅವಕಾಶ ಕಲ್ಪಿಸಿ ಕೊಟ್ಟಿದ್ದ ಜನಾರ್ದನರೆಡ್ಡಿ ಅವರನ್ನು ಈ ಸಮಯದಲ್ಲಿ ಕೃತಜ್ಞತಾ ಭಾವದಿಂದ ಸ್ಮರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಜನಾರ್ದನ ರೆಡ್ಡಿ ಅವರನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ತುಂಬಾ ಬೇಸರಗೊಂಡು ಹಾಗೂ ಈ ಕುರಿತು ಪಕ್ಷದ ಮೇಲಿಟ್ಟಿದ್ದ ವಿಶ್ವಾಸ ಕಳೆದುಕೊಂಡಿದ್ದೇನೆ ಎಂದರು.ಹೀಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದರು.