ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಡಿಸಿಎಂ ಜಿ ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ದಲಿತ ಸಮುದಾಯದ ವ್ಯಕ್ತಿ ಒಬ್ಬರನ್ನು ಸಿಎಂ ಮಾಡಬೇಕು ಎಂದು ಪೋಸ್ಟರ್ ಹಿಡಿದು ಒತ್ತಾಯಿಸಿದರು.ತುಮಕೂರು ನಗರ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಪ್ರತಿಭಟಿಸಿ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಜಿ ಪರಮೇಶ್ವರ್ ರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾವಂತ, ದಕ್ಷ, ಪ್ರಾಮಾಣಿಕ ಮತ್ತು ಸಜ್ಜನ ರಾಜಕಾರಣಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಈ ಬಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿದೆ ಎಂಬುದನ್ನು ಸಾಬೀತು ಪಡಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷ ಅತ್ಯಂತ ಬಹುಮತಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವ ಹಂತಕ್ಕೆ ಬಂದಿದೆ ಎಂದರೆ ಅದರ ಹಿಂದೆ ಡಾ.ಜಿ.ಪರಮೇಶ್ವರ್ ಅವರ ಶ್ರಮವಿದೆ, ಮಧುಗಿರಿ ಮತ್ತು ಕೊರಟಗೆರೆ ಮೀಸಲು ಕ್ಷೇತ್ರಗಳಲ್ಲಿ ತಲಾ ಮೂರು ಬಾರಿ ಸೇರಿದಂತೆ 6ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಡಾ.ಜಿ.ಪರಮೇಶ್ವರ್ ರೇಷ್ಮೆ ಸಚಿವರಾಗಿ,ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸಚಿವರಾಗಿ, ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ, ಅಲ್ಲದೆ ಈ ಬಾರಿಯ ಚುನಾವಣೆಯಲ್ಲಿ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಅತ್ಯಂತ ಉತ್ತಮ ಪ್ರಣಾಳಿಕೆ ನೀಡಿದ್ದಾರೆ,
ಹಾಗಾಗಿ ಈ ಬಾರಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯಾಗಿ ನೇಮಿಸುವ ಮೂಲಕ ಪಕ್ಷಕ್ಕಾಗಿ ದುಡಿದವರಿಗೆ ಮನ್ನಣೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.