ಬೆಂಗಳೂರು: ನಾಳೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿರುವ ಪೊಲೀಸರು, 2 ಗೇಟ್ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಸಭೆಯ ನಿರ್ಣಯದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರನ್ನು ಕರೆಸಿಕೊಂಡು ಹಲವು ಸುತ್ತಿನ ಸಭೆ ನಡೆಸಿದ್ದರು.
ಅಧಿಕೃತವಾಗಿ ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯರನ್ನು ಸಿಎಂ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಎಂದು ಘೋಷಿಸಲಾಯಿತು. ಜೋಡೆತ್ತುಗಳು ನಾಳೆಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಶೀಲಿಸಿದರು. ಅಲ್ಲದೇ ಸರ್ಕಾರ ಹಿರಿಯ ಅಧಿಕಾರಿಗಳು ಹಾಗು ಪೊಲೀಸರಿಗೆ ಕಾರ್ಯಕ್ರಮದ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.
ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. 8 ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್ಪೆಕ್ಟರ್ಗಳು, 1,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.