ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಮಾತನಾಡಲಿ ಎಂದರು.
ದೇಶದಲ್ಲಿ ರಾಜ್ಯವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದೆ. ಈ ಬಗ್ಗೆ ಅವರು ಮಾತನಾಡುತ್ತಿಲ್ಲ.40% ಕಮಿಷನ್ ದೂರು ನೀಡಿದ ಕೆಂಪಣ್ಣ ಅವರಿಗೆ ಯಾಕೆ ಉತ್ತರ ನೀಡುತ್ತಿಲ್ಲ? ಪಿಎಸ್‌ಐ ಹಗರಣ, ನೇಮಕಾತಿ ಅಕ್ರಮ ಯಾರಿಂದ ಆಗುತ್ತಿದೆ? ಈ ಹಗರಣಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ಇಲ್ಲವೇ? ಎಂದು ಪ್ರಶ್ನೆ ಮಾಡಿದರು.
ಬಿಎಸ್‌ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.
ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂದು ಅಧಿಕೃತವಾಗಿ ಘೋಷಿಸಿ, ಅವರಿಗೆ ಜವಾಬ್ದಾರಿ ನೀಡಲಿ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಯಡಿಯೂರಪ್ಪ ಅವರಿಗೆ ಅಧಿಕಾರ ನೀಡಲಿ. ಆಗ ಅವರ ನಮ್ರತೆಯನ್ನ ಜನ ನಂಬುತ್ತಾರೆ ಎಂದರು.