ಬೆಂಗಳೂರು: ಸಹೋದರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಖುಷಿ ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಓರ್ವ ಸಾಮಾನ್ಯ ವ್ಯಕ್ತಿಯಾಗಿ, ಅವರ ಸಹೋದರನಾಗಿ ಡಿ.ಕೆ.ಶಿವಕುಮಾರ್ ಈ ರಾಜ್ಯದ ಮುಖ್ಯಮಂತ್ರಿಯಾದರೆ ನಾನೇ ಹೆಚ್ಚು ಸಂತೋಷಪಡುತ್ತೇನೆ ಎಂದು ಅನಿಸಿಕೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ, ಅವರಿಗೆ ಧನ್ಯವಾದ ಎಂದರು. ಇನ್ನೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುತ್ತಿದ್ದಂತೆ, ಕರ್ನಾಟಕದ ಹಿತದೃಷ್ಟಿಯಿಂದ ತಮ್ಮ ತಂದೆ ಮುಖ್ಯಮಂತ್ರಿಯಾಗಬೇಕು ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
“ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು” ಎಂದು ತಿಳಿಸಿದ್ದಾರೆ. ಮಗನಾಗಿ, ಖಂಡಿತಾ ಅವರನ್ನು ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇನೆ. ಆದರೆ ರಾಜ್ಯದ ನಿವಾಸಿಯಾಗಿ ಅವರ ಕಳೆದ ಬಾರಿ ಅವರು ನೀಡಿದ ಉತ್ತಮ ಆಡಳಿತವನ್ನು ನೋಡಿದ್ದೇನೆ. ಈ ಬಾರಿಯೂ ಮುಖ್ಯಮಂತ್ರಿಯಾದರೆ ಬಿಜೆಪಿ ಆಡಳಿತದ ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ಸರಿಪಡಿಸಲಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಅವರು ಮುಖ್ಯಮಂತ್ರಿಯಾಗಬೇಕು’’ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
ಪಕ್ಷ ಗೆಲುವಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾತ್ರ ಮಹತ್ವದ್ದಾಗಿದ್ದು, ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ.