ಬೆಂಗಳೂರು : ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಹೆಣ್ಣು ಮಕ್ಕಳು ಕರ್ನಾಟಕವನ್ನು ಮಾದರಿಯಾಗಿ ನೋಡ್ತಿದ್ದಾರೆ. ಕರ್ನಾಟಕದಂತೆ ನಮಗೂ ಸೌಲಭ್ಯಗಳನ್ನು ಒದಗಿಸಿ ಎಂದು ಕೇಳ್ತಿದ್ದಾರೆ. ಗ್ಯಾಸ್ ದರ 500 ರೂಪಾಯಿಗೆ ಇಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿದ್ದೆವು. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ದರ ಇಳಿಸಿದ್ದಾರೆ ಎಂದರು.
ಇಂದು ನಾಡಿನ ಹೆಣ್ಣು ಮಕ್ಕಳ ಖಾತೆಗೆ ಹಣ ಹೋಗ್ತಿದೆ. 1.10 ಕೋಟಿ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗಲಿದೆ ಎಂದು ಪ್ರಧಾನ ಮಂತ್ರಿ ಹೇಳುತ್ತಿದ್ದರು. ಆದರೆ, ನಾವು ಯಾವುದೇ ಸಮಸ್ಯೆ ಇಲ್ಲದೆ ಯೋಜನೆ ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ದರದಲ್ಲಿ 200 ರೂಪಾಯಿ ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಂಡು ಕೇಂದ್ರ ಸರ್ಕಾರ ದರ ಕಡಿತ ಮಾಡಲು ಮುಂದಾಗಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಅದ್ದೂರಿ ಚಾಲನೆ ಸಿಗ್ತಿದೆ. ಯೋಜನೆಗೆ ನೋಂದಣಿ ಮಾಡಿಕೊಂಡಿರುವ 1 ಕೋಟಿ 10 ಲಕ್ಷ ಮಹಿಳೆಯರ ಖಾತೆಗೆ ಏಕಕಾಲಕ್ಕೆ ತಲಾ 2 ಸಾವಿರ ರೂಪಾಯಿ ಹಣ ಜಮೆ ಆಗಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.