ನವದೆಹಲಿ : ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ (INDIA) ದ ಸಮನ್ವಯ ಸಮಿತಿಯ ಮೊದಲ ಸಭೆ ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದ್ದು, 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಈ ಹಿಂದಿನ ಚುನಾವಣೆಗಳಲ್ಲಿ ಪಕ್ಷಗಳ ಕಾರ್ಯಕ್ಷಮತೆ ಮತ್ತು ಪ್ರತಿ ರಾಜ್ಯಗಳಲ್ಲಿ ಆಯಾ ಪಕ್ಷಗಳಿಗೆ ಇರುವ ಬಲವನ್ನು ನೋಡಿ ಸೀಟು ಹಂಚಿಕೆ ಮಾಡಲಾಗುವುದು ಎಂದು ಇಂಡಿಯಾ ಒಕ್ಕೂಟದ ನಾಯಕರೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಆಗಸ್ಟ್ 31 ಮತ್ತು ಸಪ್ಟೆಂಬರ್ 1ರಂದು ಮುಂಬೈನಲ್ಲಿ ನಡೆದ ಒಕ್ಕೂಟದ ಮೂರನೇ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಇಂಡಿಯಾ ಒಕ್ಕೂಟದ ನಾಯಕರು ತಿಳಿಸಿದ್ದಾರೆ. ಮುಂಬೈನಲ್ಲಿ ನಡೆದ ಸಭೆಯಲ್ಲಿ 14 ಜನರ ಸಮನ್ವಯ ಸಮಿತಿಯನ್ನು ರಚಿಲಾಗಿದೆ.
ಇದನ್ನೂ ಓದಿ : ‘ಸನಾತನ ವಿರುದ್ಧ ಹೋರಾಡಲು ‘I.N.D.I.A’ ಒಕ್ಕೂಟ ರಚಿಸಲಾಗಿದೆ’
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯ್ರಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಜನತಾ ದಳದ ನಾಯಕ ಲಾಲು ಪ್ರಸಾದ್ ಯಾದವ್ ಸೇರಿದಂತೆ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಆದಷ್ಟು ಬೇಗ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ್ದಾರಂತೆ. ಈ ಹಿನ್ನೆಲೆ ಇಂದು ಸಭೆ ಕರೆಯಲಾಗಿದೆ ಎನ್ನಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.