Wednesday, November 29, 2023
spot_img
- Advertisement -spot_img

‘ಬೆಳ್ಳಂ ಬೆಳಗ್ಗೆಯೇ ವರದಿ ಓದಿ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು’

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೃಷಿ ಮತ್ತು ಕಂದಾಯ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ‘ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯೇ’ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು. ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ’ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಕಾವೇರಿ ನೀರಿನ ವಿಚಾರದಲ್ಲಿ ಕೇಂದ್ರ ರಾಜಕೀಯ ಪರಿಹಾರಕ್ಕೆ ಮುಂದಾಗಬೇಕು’

‘ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ’ ಎಂದು ಕಿಡಿಕಾರಿದ್ದಾರೆ.

‘ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಚೈತ್ರಾ ಸಿಡಿಸಿದ ಇಂದಿರಾ ಕ್ಯಾಟೀನ್ ಬಿಲ್ ಬಾಂಬ್; ಅಧಿಕಾರಿಗಳ ಬೆನ್ನುಬಿದ್ದ ಸಿಸಿಬಿ!

‘ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ’ ಎಂದು ಟೀಕಿದ್ದಾರೆ.

‘ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರ್ಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ’ ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles