ಕೋಲಾರ : ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಇಂದು ಕುರುಡು ಮಲೆ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ತಂಡದಿಂದ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಕುಂಭಕರ್ಣ ನಿದ್ದೆಯಲ್ಲಿರುವ ಸರ್ಕಾರವನ್ನು ಎಚ್ಚರಿಸಬೇಕಾಗಿದೆ. ಹಬ್ಬದ ಬಳಿಕ ರಾಜ್ಯದ ಎಲ್ಲಾ ಮುಖಂಡರ ಜೊತೆ ಪ್ರತಿ ಜಿಲ್ಲೆಗೆ ಪ್ರವಾಸ ಮಾಡ್ತೇನೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತೇವೆ, ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ : PM Modi Birthday Special: ಪಿಎಂ ಮೋದಿ ಹುಟ್ಟುಹಬ್ಬದ ವಿಶೇಷ : ಪ್ರಯಾಣಿಕರಿಗೆ ಡಿಸ್ಕೌಂಟ್ ನೀಡಿದ ಆಟೋ ಚಾಲಕರು
ಜನರಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯ ತಿಳಿಸಿ ಪಕ್ಷ ಬಲಪಡಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಭೀಕರ ಬರ, ನೀರಿಗೆ ಹಾಹಾಕಾರ ಇದ್ದರೂ ಸಹ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.
ಕಳೆದ ಬಾರಿಯಂತೆ ಈ ಸಲವೂ 25ಕ್ಕೂ ಹೆಚ್ಚು ಸೀಟು ಗೆಲ್ಲೇಬೇಕು. ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಿ ಬಲಪಡಿಸಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ತಾತ್ಕಾಲಿಕವಾಗಿರುತ್ತದೆ, ರಾಜ್ಯದಲ್ಲಿ ಅಭಿವೃದ್ಧಿ ಮುಖ್ಯ. ಗ್ಯಾರಂಟಿ ಯೋಜನೆಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳೋದಿಲ್ಲ. ರಾಜ್ಯದಲ್ಲಿ ಒಂದು ಕಿ.ಮೀ. ಸಹ ರಸ್ತೆ ಆಗಿಲ್ಲ, ಅಭಿವೃದ್ಧಿ ಸ್ಥಗಿತವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜನರು ಮರೆತಿದ್ದಾರೆ. ನೀರಾವರಿ, ಅಭಿವೃದ್ಧಿ ಕೆಲಸದ ಬಗ್ಗೆ ಯೋಚನೆ ಮಾಡುತ್ತೇವೆ. ಸರ್ಕಾರ ಕಾವೇರಿ ನೀರಿನ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಮುಖ್ಯಮಂತ್ರಿಗೆ ಯಾವುದೇ ಕಳಕಳಿ ಇಲ್ಲದೆ ಇರುವುದನ್ನು ಖಂಡಿಸುತ್ತೇನೆ. ಕನ್ನಂಬಾಡಿ ಕಟ್ಟೆ ಖಾಲಿ ಆದರೂ ನೀರು ಹರಿಸುತ್ತಿದ್ದಾರೆ, ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇನೆ. ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ, ಈ ವಿಷಯದಲ್ಲಿ ಅಂತಿಮ ರೂಪದ ಬಗ್ಗೆ ಕೇಂದ್ರದ ನಾಯಕರು ತೀರ್ಮಾನಿಸುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.