ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ನಾಯಕರ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ನಿನ್ನೆ (ಮಂಗಳವಾರ) ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆದಿದ್ದು, ಈ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಉಲ್ಟಾ ಹೊಡೆದ ಯಡಿಯೂರಪ್ಪ : ಕಳೆದ ವಾರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಯಡಿಯೂರಪ್ಪ, ಬಿಜೆಪಿ-ಜೆಡಿಎಸ್ ಮೈತ್ರಿಯಾಗಲಿದೆ. ಜೆಡಿಎಸ್ ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಹೇಳಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಆದರೆ, ಯಡಿಯೂರಪ್ಪ ಅವರನ್ನು ಹೊರತು ಯಾವುದೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಮಲ-ದಳ ಮೈತ್ರಿ ಕುರಿತು ಖಚಿತಪಡಿಸಿರಲಿಲ್ಲ.
ಇದನ್ನೂ ಓದಿ : ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ :ಉಮೇಶ್ ಜಾಧವ್
ಆದರೆ, ನಿನ್ನೆ (ಸೆ.12) ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತೇನೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನನಗೆ ಇದುವರೆಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಕೇಂದ್ರ ನಾಯಕರದ್ದೇ ಅಂತಿಮ ನಿರ್ಧಾರ ಎಂದು ಹೇಳಿದ್ದಾರೆ.
ಇಂದು ಬೆಳಿಗ್ಗೆ 11:30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಡಿಯೂರಪ್ಪ ದೆಹಲಿಗೆ ಹಾರಲಿದ್ದಾರೆ. ರಾಷ್ಟ್ರ ರಾಜಧಾನಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಬಿಎಸ್ ವೈ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮತ್ತು ಸಂಸದೀಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.