ದೊಡ್ಡಬಳ್ಳಾಪುರ: ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕಾರ ವಿಚಾರ ತಿಳಿಯುತ್ತಿದ್ದಂತೆ ಶಾಸಕ ವಿರೂಪಾಕ್ಷಪ್ಪ ಈಗಾಗ್ಲೇ ನೈತಿಕ ಹೊಣೆಹೊತ್ತು ಕೆ.ಎಸ್.ಡಿ.ಎಲ್ ಗೆ ರಾಜಿನಾಮೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಪಾರದರ್ಶಕ ತನಿಖೆ ನಡೆಯಲಿದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಪ್ರಕರಣ ಪಕ್ಷಕ್ಕೆ ಪರಿಣಾಮ ಬೀರುವುದಿಲ್ಲ, ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಸಿಕ್ಕ ಹಣ ಕಾನೂನು ಬಾಹಿರವಾಗಿದ್ದರೇ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಏನೂ ಹೇಳಲು ಆಗುವುದಿಲ್ಲ. ಪೊಲೀಸ್ ಮತ್ತು ಲೋಕಾಯುಕ್ತ ಅಧಿಕಾರಿಗಳು ಪಾರದರ್ಶಕವಾಗಿ ವಿಚಾರಣೆ ಮಾಡ್ತಿದ್ದಾರೆ. ವಿರೂಪಾಕ್ಷಪ್ಪ ಬಂಧನ ಯಾವಾಗ?, ಹೇಗೆ? ಮಾಡಬೇಕು ಎಂಬುದನ್ನು ಅವರೇ ನಿಶ್ಚಯಿಸುತ್ತಾರೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಅಭಿಪ್ರಾಯಪಟ್ಟರು.
ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಇಬ್ಬರ ಜಗಳದಿಂದ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದ್ದು, ಇಬ್ಬರಿಗೂ ಎರಡುಮೂರು ಬಾರಿ ಎಚ್ಚರಿಕೆ ನೀಡಿದ್ದರೂ ಹಾಗೇ ಮುಂದುವರೆಸಿದ್ದಾರೆ, ಇವರ ವಿರುದ್ದ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.