ಶಿಗ್ಗಾಂವಿ: ಅಶೋಕ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಆರ್.ಅಶೋಕ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಾಡ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕಂದಾಯ ಇಲಾಖೆಯ ಕ್ರಾಂತಿಕಾರಿ ಹೆಜ್ಜೆಯಾಗಿದೆ, ಬಡಜನರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗುವಂತಾಗಿದೆ ಎಂದರು.
ಸಚಿವ ಆರ್.ಅಶೋಕ ಅವರು ಹಲವು ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ನನ್ನ ಕ್ಷೇತ್ರದಲ್ಲಿ ಯಾವಾಗ ಮಾಡುತ್ತೀರಿ ಎಂದು ಕೇಳಿದೆ. ನನ್ನ ಕ್ಷೇತ್ರದ ಜನರದ್ದೂ ಸಾಕಷ್ಟು ಬೇಡಿಕೆಗಳಿವೆ. ಫಲಾನುಭವಿಗಳಿಗೆ ಸೌಲಭ್ಯ ಕೊಡಬೇಕು ಎಂದು ಕೇಳಿದಾಗ ಸಂತೋಷದಿಂದ ಇಲ್ಲಿಗೆ ಬಂದಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಜನರ ಅಭಿವೃದ್ಧಿಗೆ ಕಟಿಬದ್ಧವಾಗಿದೆ. ವಿವಿಧ ಯೋಜನೆಗಳಡಿ ರಾಜ್ಯದ 30 ಸಾವಿರ ಜನರಿಗೆ ವಿವಿಧ ಸೌಲಭ್ಯ ಕಲ್ಪಿಸಿ ಕೊಡುತ್ತಿದ್ದೇವೆ. ಬಡತನ ನಿರ್ಮೂಲನೆ ಯೋಜನೆಯಡಿ 6 ಸಾವಿರ ಸ್ತ್ರೀಶಕ್ತಿ ಸಂಘಗಳಿಗೆ ತಲಾ 1 ಲಕ್ಷ ರು. ಸಹಾಯಧನ ಕೊಡುತ್ತಿದ್ದೇವೆ ಎಂದರು.ಈ ಯೋಜನೆಗಳು ಪ್ರತಿ ತಾಲೂಕಿನಲ್ಲಿಯೂ ಯಶಸ್ವಿಯಾಗಿ ಜಾರಿಯಾಗಬೇಕು. ಇದಕ್ಕಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು.