ಬೆಂಗಳೂರು : ಅತ್ತ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ರಾಜ್ಯಮಟ್ಟದ ಕಾರ್ಯಕ್ರಮ ನಡೆದರೆ, ಇತ್ತ ರಾಜ್ಯ ರಾಜಧಾನಿಯಲ್ಲೂ ಅದ್ದೂರಿಯಾಗಿ ಯೋಜನೆಗೆ ಚಾಲನೆ ನೀಡಲಾಯಿತು.
ನಗರದ ಪುರಭವನದಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಯೋಜನೆಗೆ ಚಾಲನೆ ನೀಡಿದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆಲ ಮಹಿಳೆಯರಿಗೆ ಅಧಿಕಾರಿಗಳು ಹೂಗುಚ್ಛ, ಉಡುಗೊರೆ ನೀಡಿ ಗೌರವಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತರು, ಬೆಂಗಳೂರಿನಲ್ಲಿ 10 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಹಲವರು ಭಾಗಿಯಾಗಿದ್ದಾರೆ. ನಗರದ ಎಲ್ಲಾ ವಾರ್ಡ್ ಗಳಲ್ಲಿ ಮಹಿಳೆಯರಿಗೆ ಲೈವ್ ಟೆಲಿಕಾಸ್ಟ್ ವ್ಯವಸ್ಥೆ ಮಾಡಲಾಗಿತ್ತು ಎಂದರು.
ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಸೋಮಶೇಖರ್ ಎಂಟ್ರಿ : ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಪಾಲ್ಗೊಂಡರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ದಿಢೀರ್ ಎಂಟ್ರಿ ಕೊಟ್ಟ ಸೋಮಶೇಖರ್, ಯೋಜನೆಯ ಬಗ್ಗೆ ಮೆಚ್ಚುಗೆಯ ವ್ಯಕ್ತಪಡಿಸಿದರು.
ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯ ನಡುವೆ ಅವರು ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ಕುತೂಹಲಕ್ಕೆ ಕಾರಣವಾಯಿತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.