ಮೈಸೂರು : ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆ ‘ಗೃಹಲಕ್ಷ್ಮಿ’ಗೆ ಇಂದು ಅದ್ದೂರಿ ಚಾಲನೆ ದೊರೆಯಿತು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಯೋಜನೆ ಲೋಕಾರ್ಪಣೆ ಮಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಡಿಜಿಟಲ್ ಕಾರ್ಡ್ ವಿತರಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಸಿ ಮಹದೇವಪ್ಪ ಉಪಸ್ಥಿತರಿದ್ದರು.
ಏಕಕಾಲಕ್ಕೆ ಖಾತೆಗೆ ಹಣ ಜಮೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಹಿಳೆಯರ ಖಾತೆಗೆ ತಲಾ 2 ಸಾವಿರ ರೂಪಾಯಿ ಜಮೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ರಾಹುಲ್ ಬಟನ್ ಒತ್ತುತ್ತಿದ್ದಂತೆ ರಾಜ್ಯಾದ್ಯಂತ ಸುಮಾರು 1 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ ತಲಾ 2 ಸಾವಿರ ರೂಪಾಯಿ ಜಮೆ ಆಗಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದವರ ಖಾತೆಗೆ ಇಂದು ಸಂಜೆಯೊಳಗೆ ಹಣ ಜಮೆ ಆಗುವುದು ಖಚಿತ ಎನ್ನಲಾಗಿದೆ.
ಸಾವಿರಾರು ಮಹಿಳೆಯರು ಭಾಗಿ : ಮಹಿಳೆಯರಿಗಾಗಿ ರೂಪಿಸಿರುವ ಗೃಹಲಕ್ಷ್ಮಿ ಕಾರ್ಯಕ್ರಮದ ಲೋಕಾರ್ಪಣೆಯಲ್ಲಿ ಮಹಿಳಾ ಮಣಿಗಳು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಫಲಾನುಭವಿಗಳು ಖುದ್ದಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೇವಲ ಕರ್ನಾಟಕದವರು ಮಾತ್ರವಲ್ಲದೆ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಂದಲೂ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ದೊರೆತಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.