ಬೆಂಗಳೂರು: ರಾಜರಾಜೇಶ್ವರಿ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ದಯವಿಟ್ಟು ಸಮಸ್ಯೆ ಪರಿಹರಿಸಿ ಎಂದು ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜರಾಜೇಶ್ವರಿ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಹಾಸ್ಟೆಲ್ ಸಿಬ್ಬಂದಿ, ಅಧಿಕಾರಿಗಳಿಂದ ವಿದ್ಯಾರ್ಥಿನಿಯರ ಮೇಲೆ ಕಿರುಕುಳ ನಡೆಯುತ್ತಿದೆ, ಅವರಿಗೆ ಸರಿಯಾದ ಊಟೋಪಚಾರ ನೀಡ್ತಿಲ್ಲ. ಕಬ್ಬಿಣದ ಮಂಚದ ಮೇಲೆ ಮಲಗಬೇಕಾದ ಸ್ಥಿತಿ ಇದೆ. ಮಕ್ಕಳೇ ಅಡಿಗೆ ತಯಾರಿಸುವಂತೆ ಒತ್ತಾಯ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಮಕ್ಕಳಿಂದ ದೇಣಿಗೆ ರೂಪದಲ್ಲಿ ವಸ್ತುಗಳನ್ನು ಪಡೆಯಲಾಗ್ತಿದೆ. ಇದರ ಬಗ್ಗೆ ದೂರು ಕೊಟ್ರೂ ಕ್ರಮ ಜರುಗಿಸಿಲ್ಲ. ಕೂಡಲೇ ಅಧಿಕಾರಿಗಳ ಮೇಲೆ ಕ್ರಮಜರುಗಿಸಬೇಕು ಹಾಗೂ ನೊಂದ ಮಕ್ಕಳಿಗೆ ನ್ಯಾಯ ದೊರಕಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಪ್ರತಿನಿತ್ಯ ಶೌಚಾಲಯ ಹಾಗೂ ವಿದಾರ್ಥಿ ನಿಲಯ ಸ್ವಚ್ಛಗೊಳಿಸುವಂತೆ ಪೀಡಿಸುತ್ತಾರೆ. ತಾಲೂಕು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ, ತಪ್ಪಿತಸ್ಥ ವಾರ್ಡನ್ ಹಾಗೂ ತಾಲೂಕು ಅಧಿಕಾರಿಗಳ ವಿರುದ್ಧ ಕಾನೂನಿನಡಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಆಗ್ರಹಿಸಿದ್ದಾರೆ.